ಒಡಿಶಾ: ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ತನಿಖೆ ಮುಂದುವರಿಕೆ

 ಒಡಿಶಾದ ಕಟಕ್‌ನ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬೆಹಾರಿ ಅವರ ಮೃತದೇಹ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

                         ಸುಭಾಷ್ ಕುಮಾರ್ ಬೆಹಾರಿ

By : Rekha.M

Online Desk

ಕಟಕ್: ಒಡಿಶಾದ ಕಟಕ್‌ನ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬೆಹಾರಿ ಅವರ ಮೃತದೇಹ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರಿಗೆ 49 ವರ್ಷ ವಯಸ್ಸಾಗಿತ್ತು. ಪೋಕ್ಸೊ  (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಕುತ್ತಿಗೆಯಲ್ಲಿ ಗಾಯದ ಗುರುತುಗಳಿವೆ ಎಂದು ಸಹಾಯಕ ಪೊಲೀಸ್ ಕಮಿಷನರ್ ತಪಸ್ ಪ್ರಧಾನ್ ಹೇಳಿದ್ದಾರೆ.

ಘಟನೆ ನಡೆದಾಗ ನ್ಯಾಯಾಧೀಶರ ಪತ್ನಿ ಮನೆಯಲ್ಲಿರಲಿಲ್ಲ. ಮಗಳು ಶಾಲೆಗೆ ಹೋಗಿದ್ದರು. ಕಳೆದೆರಡು ದಿನಗಳಿಂದ ರಜೆಯಲ್ಲಿದ್ದ ನ್ಯಾಯಾಧೀಶರು ಶುಕ್ರವಾರ ಕೆಲಸಕ್ಕೆ ಹಾಜರಾಗಬೇಕಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಟಕ್‌ನ ಎಸ್‌‍ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಾಥಮಿಕವಾಗಿ ಆತ್ಮಹತ್ಯೆ ಆಗಿರಬಹುದು ಎಂದು ಶಂಕಿಸಲಾಗಿದೆ. ಅವರು ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದರಿಂದ  ಹೆಚ್ಚು ಮಾತನಾಡುತ್ತಿರಲಿಲ್ಲ. ಕಟಕ್‌ನಲ್ಲಿರುವ ನ್ಯಾಯಾಧೀಶರ ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು  ಮೃತ ಜಡ್ಜ್ ಸಹೋದರ ತಿಳಿಸಿದ್ದಾರೆ.


    Post a Comment

    Previous Post Next Post