ಎಸ್ ಸಿ, ಎಸ್ ಟಿಗೆ ಮೀಸಲಾತಿ ಹೆಚ್ಚಳ: ನಾಳೆ ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ

 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ಚರ್ಚಿಸಲು ನಾಳೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನ  ಸರ್ವ ಪಕ್ಷಗಳ ನಾಯಕರ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದಾರೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By : Rekha.M
Online Desk

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ಚರ್ಚಿಸಲು ನಾಳೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನ  ಸರ್ವ ಪಕ್ಷಗಳ ನಾಯಕರ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದಾರೆ.

ಮೀಸಲಾತಿ ಹೆಚ್ಚಳ ಸಂಬಂಧ ಸರ್ವ ಪಕ್ಷ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚಿಗೆ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಭರವಸೆ ನೀಡಿದ್ದರು. ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ಬೇಡಿಕೆಯಿದೆ.  

ಜನಸಂಖ್ಯೆ ಆಧಾರದ ಮೇಲೆ ಪರಿಶಿಷ್ಟ ಜಾತಿಗೆ ಶೇ. 15 ರಿಂದ 17 ರಷ್ಟು, ಪರಿಶಿಷ್ಟ ಪಂಗಡಕ್ಕೆ ಶೇ. 3 ರಿಂದ ಶೇ. 7 ರಷ್ಟು ಮೀಸಲಾತಿ ಹೆಚ್ಚಿಸಬೇಕೆಂದು ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಎಸ್ ಟಿ ಸಮುದಾಯಕ್ಕೆ ಶೇ. 7.5 ರಷ್ಟು ಮೀಸಲಾತಿ ಹೆಚ್ಚಿಸಬೇಕೆಂಬುದು ವಾಲ್ಮೀಕಿ ಸಮುದಾಯದ ಬೇಡಿಕೆಯಾಗಿದೆ. ಸಾರಿಗೆ ಸಚಿವ ಬಿ. ಶ್ರೀರಾಮುಲು ಈ ಬೇಡಿಕೆಯನ್ನು ತೀವ್ರವಾಗಿ ಬೆಂಬಲಿಸುತ್ತಿದ್ದಾರೆ.

ಮೀಸಲಾತಿಯನ್ನು ಶೇ. 50ಕ್ಕಿಂತ ಹೆಚ್ಚಿಸಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಆದರೆ, ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಶಿಫಾರಸುಗಳು ಸುಪ್ರೀಂ ನೀಡಿರುವ ಆದೇಶಕ್ಕಿಂತ ಹೆಚ್ಚಿನದಾಗಿದೆ. ಆದಾಗ್ಯೂ. ಅಸಾಧಾರಣ ಸಂದರ್ಭಗಳಲ್ಲಿ ನಿಯಮವನ್ನು ಸಡಿಲಿಸಬಹುದು ಎಂದು ನ್ಯಾಯಮೂರ್ತಿ ನಾಗಮೋಹನ್ ದಾಸ್ ಹೇಳಿದ್ದಾರೆ. ಇವರ ವರದಿ ಕುರಿತು ಸರ್ವ ಪಕ್ಷ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.

ವಿವಿಧ ಸಮುದಾಯಗಳ ಬೇಡಿಕೆಯ ವಿವರಗಳು, ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಸಂಪುಟದಲ್ಲಿ ಚರ್ಚಿಸಲಾಗುತ್ತದೆ ನಂತರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಈ ಮಧ್ಯೆ ಲಿಂಗಾಯತ ಪಂಚಮಶಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ವ ಪಕ್ಷಗಳ ಸಭೆ ಕರೆಯಬೇಕೆಂದು ಲಿಂಗಾಯಿತ ಸ್ವಾಮೀಜಿ ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ. 


 



Post a Comment

Previous Post Next Post