ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ.
ಇಂಜಿನಿಯರಿಂಗ್ ಮೊದಲ ವರ್ಷದ ಆರ್ಯನ್, ದಿನಕರ್, ರಿಯಾ ರವಿಚಂದ್ರ ಪಾಕ್ ಪರ ಘೋಷಣೆ ಕೂಗಿ ಉದ್ಧಟತನ ಮೆರೆದಿದ್ದಾರೆ. ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಘೋಷಣೆ ಕೂಗಿದ್ದಾರೆ. ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರು ಘೋಷಣೆಗಳನ್ನು ಕೂಗಿದರೆ, ಮತ್ತೊಬ್ಬರು ಅದನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಈ ವಿಡಿಯೋ ವೈರಲ್ ಆಗಿದೆ.
ಈ ವೇಳೆ ಇತರೆ ವಿದ್ಯಾರ್ಥಿಗಳು ಮೂವರನ್ನು ಥಳಿಸಲು ಮುಂದಾಗಿದ್ದಾರೆ. ಕೂಡಲೇ ವಿದ್ಯಾರ್ಥಿಗಳು ಉಳಿದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯುವಕ ಹಾಗೂ ಯುವತಿಯನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈ ವೇಳೆ ತಾವು ತಮಾಷೆಗಾಗಿ ಈ ರೀತಿ ಮಾಡಿರುವುದಾಗಿ ಪೊಲೀಸರ ಮುಂದೆ ವಿದ್ಯಾರ್ಥಿಗಳು ಹೇಳಿಕೆ ನೀಡಿದ್ದಾರೆ. ಸದ್ಯ ಮಾರತ್ಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವಿಡಿಯೋ ನೋಡಿದ ಕೆಲ ಯುವಕರು ವಿದ್ಯಾರ್ಥಿಗಳನ್ನು ಪ್ರಶ್ನಿಸಿದ್ದಾರೆ. ಆರ್ಯನ್ ನನ್ನು ಥಳಿಸಿ, ಕ್ಷಮೆ ಕೇಳುವಂತೆ ಮಾಡಿ ಕರ್ನಾಟಕ ಪರ ಘೋಷಣೆಗಳನ್ನು ಕೂಗಿದರು. ಕ್ಷಮೆ ಯಾಚಿಸುವ ಸಂದರ್ಭದಲ್ಲಿ, ಯಾರ ಭಾವನೆಗೂ ಧಕ್ಕೆ ತರುವ ಉದ್ದೇಶ ತನಗಿಲ್ಲ ಮತ್ತು ಇದೊಂದು ಮೂರ್ಖತನದ ಕೃತ್ಯ ಎಂದು ಸ್ಪಷ್ಟಪಡಿಸಿದ್ದಾರೆ. ಮಾರತ್ತಹಳ್ಳಿ ಪೊಲೀಸರು ವಿಡಿಯೊ ಪರಿಶೀಲನೆ ನಡೆಸಿ ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Post a Comment