ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.
ಕರ್ನಾಟಕ ಹೈಕೋರ್ಟ್ಬೆಂಗಳೂರು: ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.
ಕೇಂದ್ರ ಸರ್ಕಾರದ ನಿಷೇಧ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ನಿವಾಸಿ ಹಾಗೂ ನಿಷೇಧಿತ ಸಂಘಟನೆಯ ರಾಜ್ಯಾಧ್ಯಕ್ಷ ನಾಸಿರ್ ಅಲಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ. ಈ ಮೂಲಕ ಹೈಕೋರ್ಟ್ ಕೇಂದ್ರ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.
ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ(ಯುಎಪಿಎ) 1967ರ ಸೆಕ್ಷನ್ 3, ಉಪ ನಿಯಮ 3ರ ಅಡಿ ಪಿಎಫ್‌ಐ ನಿಷೇಧಿಸಿರುವುದು ಕಾನೂನು ಬಾಹಿರ ಮತ್ತು ಪಿಎಫ್‌ಐ ಅನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿರುವುದು ಸಂವಿಧಾನ ವಿರೋಧಿ ಕ್ರಮ ಎಂದು ಪಿಎಫ್‌ಐ ಪರ ಹಿರಿಯ ವಕೀಲ ಜಯಕುಮಾರ್ ಪಾಟೀಲ್ ವಾದಿಸಿದ್ದರು.
ಇನ್ನು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಪಿಎಫ್‌ಐ ದೇಶವಿರೋಧಿ ಕೃತ್ಯಗಳನ್ನು ನಡೆಸುತ್ತಿದ್ದು, ದೇಶದಲ್ಲಿ ಉಗ್ರ ಚಟುವಟಿಕೆಗಳನ್ನು ನಡೆಸುತ್ತಿರುವ ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈಜೋಡಿಸಿ ಉಗ್ರ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ. ಎಲ್ಲ ಆಧಾರಗಳನ್ನು ಸಂಗ್ರಹ ಮಾಡಿದ ಬಳಿಕವೇ ಪಿಎಫ್‌ಐ ನಿಷೇಧಿಸಲಾಗಿದೆ. ಇದರಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಕೇಂದ್ರ ಸರ್ಕಾರ ಸೆಪ್ಟೆಂಬರ್ 28 ರಂದು ತಕ್ಷಣದಿಂದ ಜಾರಿಗೆ ಬರುವಂತೆ ಪಿಎಫ್ಐ ಮತ್ತು ಅದರ ಮಿತ್ರ ಸಂಘಟನೆಗಳನ್ನು ಐದು ವರ್ಷಗಳ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿತ್ತು.
ದೇಶಾದ್ಯಂತ ಪಿಎಫ್‌ಐ ಕಚೇರಿಗಳು ಮತ್ತು ಅದರ ಸದಸ್ಯರ ನಿವಾಸಗಳ ಮೇಲೆ ದಾಳಿ ನಡೆಸಿದ ನಂತರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿತ್ತು.
Post a Comment