ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹೀನಾಯ ಸೋಲು ಅನುಭವಿಸಿದ್ದಾರೆ.
ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹೀನಾಯ ಸೋಲು ಅನುಭವಿಸಿದ್ದಾರೆ.
ಸತತ ಎಂಟು ಭಾರಿ ಗೆಲ್ಲುವ ಮೂಲಕ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ ಜಗದೀಶ ಶೆಟ್ಟರ್ ಅವರು ಈ ಬಾರಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರ ವಿರುದ್ಧ 35 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು ಕಂಡಿದ್ದಾರೆ.
ಜಗದೀಶ್ ಶೆಟ್ಟರ್ ಅವರಿಗೆ ಕ್ಷೇತ್ರ ತ್ಯಾಗ ಮಾಡಿ, ಅವರ ಗೆಲುವಿನ ಉಸ್ತುವಾರಿ ಹೊತ್ತುಕೊಂಡಿದ್ದ ರಜತ್ ಉಳ್ಳಾಗಡ್ಡಿ ಮಠ ಅವರು ಶೆಟ್ಟರ್ ಸೋಲಿನ ನೈತಿಕ ಹೊಣೆಹೊತ್ತು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಳೆದ ಮೂರ್ನಾಲ್ಕು ವರ್ಷಗಳಿಂದ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೆವು. ಕಾರ್ಯಕರ್ತರು ಹಗಲಿರುಳು ಶೆಟ್ಟರ್ ಪರವಾಗಿ ಕೆಲಸ ಮಾಡಿದ್ದರು. ಸೆಂಟ್ರಲ್ ಕ್ಷೇತ್ರದಲ್ಲಿ ಜನಾದೇಶ ನಮ್ಮ ವಿರುದ್ಧವಾಗಿ ಬಂದಿದೆ. ಇದರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ರಜತ್ ಹೇಳಿದ್ದಾರೆ.
إرسال تعليق