ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 14ನೇ ಬಜೆಟ್ ಮಂಡಿಸಿದ್ದು ಈ ಬಾರಿ ರಾಜ್ಯ ಬೊಕ್ಕಸ ತುಂಬಿಸಲು ಹಲವು ಕ್ಷೇತ್ರಗಳ ಮೇಲೆ ತೆರಿಗೆಯನ್ನು ಹೆಚ್ಚಿಸಿದ್ದಾರೆ.
ಸಾಂದರ್ಭಿಕ ಚಿತ್ರಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 14ನೇ ಬಜೆಟ್ ಮಂಡಿಸಿದ್ದು ಈ ಬಾರಿ ರಾಜ್ಯ ಬೊಕ್ಕಸ ತುಂಬಿಸಲು ಹಲವು ಕ್ಷೇತ್ರಗಳ ಮೇಲೆ ತೆರಿಗೆಯನ್ನು ಹೆಚ್ಚಿಸಿದ್ದಾರೆ.
ವಾಣಿಜ್ಯ ತೆರಿಗೆ
ದತ್ತಾಂಶ ವಿಶ್ಲೇಷಣೆಗಾಗಿ ಮತ್ತು ರಾಜಸ್ವ ಸಂಗ್ರಹಣೆಯನ್ನು ವೃದ್ಧಿಗೊಳಿಸಲು ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. 2023-24ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆಯ ಗುರಿಯನ್ನು 1,01,000 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ.
ಅಬಕಾರಿ
ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‍ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕದ ದರಗಳನ್ನು ಅನುಬಂಧ (ಅ) ರಲ್ಲಿರುವಂತೆ ಹಾಲಿ ಇರುವ ದರಗಳ ಮೇಲೆ ಶೇ.20ರಷ್ಟು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ. ಹಾಗೆಯೇ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175 ರಿಂದ ಶೇ.185ಕ್ಕೆ ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ. ಅಬಕಾರಿ ಸುಂಕದ ದರಗಳ ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರವು ನೆರೆ ರಾಜ್ಯಗಳಿಗಿಂತ ಕಡಿಮೆ ಇರುತ್ತದೆ. ಇದರೊಂದಿಗೆ, ಹೆಚ್ಚು ಪರಿಣಾಮಕಾರಿಯಾದ ಜಾರಿ ಮತ್ತು ನಿಯಂತ್ರಣಾ ಕ್ರಮಗಳ ಮೂಲಕ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ
2018-19ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ದಿನಾಂಕ: 01.01.2019ರಿಂದ ಜಾರಿಗೆ ತರಲಾಗಿತ್ತು. ನಂತರದಲ್ಲಿ ಕೋವಿಡ್-19 ಕಾರಣದಿಂದ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿರುವುದಿಲ್ಲ. ಪ್ರಸ್ತುತ ಸ್ವತ್ತುಗಳು ಭೌತಿಕ ಬದಲಾವಣೆಗೊಂಡು ಮಾರುಕಟ್ಟೆ ದರಗಳಲ್ಲಿ ವ್ಯತ್ಯಾಸಗಳು ಆಗಿರುವುದರಿಂದ ಇದನ್ನು ಸರಿಪಡಿಸಲು ಸರಿಯಾದ ಮಾರ್ಗಸೂಚಿ ದರಗಳನ್ನು ನಿಗದಿಪಡಿಸುವುದು ಅವಶ್ಯಕವಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ಜಾರಿಗೆ ತರಲು ಉದ್ದೇಶಿಸಲಾಗಿದೆ. 2023-24ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 25,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಸಾರಿಗೆ
ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯನ್ನು ತಿದ್ದುಪಡಿಗೊಳಿಸಿ ಸರಳೀಕರಿಸಲು ಉದ್ದೇಶಿಸಿದೆ. ಮೋಟಾರು ವಾಹನ ತೆರಿಗೆ ವ್ಯವಹಾರಗಳ ನಿಖರವಾದ ಪರಿಶೀಲನೆಗಾಗಿ ಸರಳೀಕೃತ ತಂತ್ರಾಂಶವನ್ನು ತರಲಾಗುವುದು. ಪ್ರಸ್ತುತ ಆಯ್ದ ವಾಹನದ ವರ್ಗಗಳಿಗೆ ವಿಧಿಸುವ ತೆರಿಗೆಯನ್ನು ಪರಿಷ್ಕರಿಸಲಾಗುವುದು. 2023-24ನೇ ಆರ್ಥಿಕ ವರ್ಷಕ್ಕೆ ಸಾರಿಗೆ ಇಲಾಖೆಗೆ ಒಟ್ಟು 11,500 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಗಣಿ ಮತ್ತು ಭೂವಿಜ್ಞಾನ
ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಹಾಗೂ ಖನಿಜ ಮತ್ತು ಉಪಖನಿಜಗಳ ಮೇಲಿನ ಮೇಲ್ವಿಚಾರಣೆ ನಡೆಸಿ ಸುಸ್ಥಿರ, ಸುರಕ್ಷಿತ ಮತ್ತು ವೈಜ್ಞಾನಿಕ ಗಣಿಗಾರಿಕೆಯನ್ನು ಉತ್ತೇಜಿಸಿ, ರಾಜಸ್ವ ಸಂಗ್ರಹಣೆಯನ್ನು ಹೆಚ್ಚಿಸಲು ಅವಶ್ಯಕ ಸುಧಾರಣೆಗಳನ್ನು ಜಾರಿಗೊಳಿಸಲಾಗುವುದು. 2023-24ನೇ ಸಾಲಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 9,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಆಯವ್ಯಯ ಅಂದಾಜು 2023-24
2023-24ನೇ ಸಾಲಿನಲ್ಲಿ ರಾಜಸ್ವ ಜಮೆಗಳು 2,38,410 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ಇದರಲ್ಲಿ ರಾಜ್ಯದ ಒಟ್ಟು ಸ್ವಂತ ತೆರಿಗೆ ರಾಜಸ್ವವು ಜಿ.ಎಸ್.ಟಿ. ಪರಿಹಾರ ಒಳಗೊಂಡಂತೆ 1,75,653 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 12,500 ಕೋಟಿ ರೂ.ಗಳನ್ನು ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ. ಕೇಂದ್ರ ತೆರಿಗೆಯ ಪಾಲಿನ ರೂಪದಲ್ಲಿ 37,252 ಕೋಟಿ ರೂ.ಗಳನ್ನು ಹಾಗೂ 13,005 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದಿಂದ ಸಹಾಯಾನುದಾನ ರೂಪದಲ್ಲಿ ರಾಜ್ಯ ಸರ್ಕಾರವು ನಿರೀಕ್ಷಿಸಿದೆ. ಈ ರಾಜಸ್ವ ಜಮೆಗಳಿಗೆ ಪೂರಕವಾಗಿ 85,818 ಕೋಟಿ ರೂ.ಗಳ ಒಟ್ಟು ಸಾಲಗಳು, 23 ಕೋಟಿ ರೂ.ಗಳ ಋಣೇತರ ಸ್ವೀಕೃತಿಗಳು ಮತ್ತು 228 ಕೋಟಿ ರೂ.ಗಳ ಸಾಲ ವಸೂಲು ಮೊತ್ತವನ್ನು ಅಂದಾಜಿಸಲಾಗಿದೆ. 2023-24ನೇ ಸಾಲಿನಲ್ಲಿ ಒಟ್ಟು ಜಮೆಗಳು 3,24,478 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. 2023-24ನೇ ಸಾಲಿನಲ್ಲಿ ಒಟ್ಟು 2,50,933 ಕೋಟಿ ರೂ.ಗಳ ರಾಜಸ್ವ ವೆಚ್ಚ, 54,374 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 22,441 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,27,747 ಕೋಟಿ ರೂಪಾಯಿಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.
ದೇಶದ ದೊಡ್ಡ ರಾಜ್ಯಗಳಲ್ಲಿ ನಮ್ಮ ರಾಜ್ಯವು ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 21ರಷ್ಟು ಅತ್ಯಧಿಕ ಬೆಳವಣಿಗೆ ದರವನ್ನು ಸಾಧಿಸಿದೆ. ಪ್ರಸ್ತುತ ಸಾಲಿನ ಮೊದಲನೇ ತ್ರೈಮಾಸಿಕದಲ್ಲಿ ಕೆ.ಜಿ.ಎಸ್.ಟಿ ರಾಜಸ್ವ ಸಂಗ್ರಹವು 18,962 ಕೋಟಿ ರೂ.ಗಳಾಗಿರುತ್ತದೆ. ಪರಿಣಾಮಕಾರಿ ತೆರಿಗೆ ಆಡಳಿತಕ್ಕಾಗಿ ಹಾಗೂ ವಾಣಿಜ್ಯೋದ್ಯಮಗಳಿಗೆ ಉತ್ತಮ ಸಂಪರ್ಕವನ್ನು ನೀಡಲು, ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ನಾಲ್ಕು ಹೊಸ ವಿಭಾಗಗಳನ್ನು ಶೀಘ್ರದಲ್ಲಿ ಕಾರ್ಯೋನ್ಮುಖಗೊಳಿಸಲಾಗುವುದು. ಅತ್ಯಧಿಕ ತೆರಿಗೆ ಪಾವತಿದಾರರಿಗಾಗಿ ಒಂದು ಪ್ರತ್ಯೇಕ ವಿಭಾಗವನ್ನು ಬೆಂಗಳೂರು ನಗರದಲ್ಲಿ ಸ್ಥಾಪಿಸಲಾಗುವುದು.
Post a Comment