ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಪ್ರಕರಣಗಳು ನಡೆದಿರುವುದು ಅಪಮಾನಕರ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಪ್ರಕರಣಗಳು ನಡೆದಿರುವುದು ಅಪಮಾನಕರ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಿನ್ನೆ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಪರಿಶೀಲನೆ ಮಾಡಲು, ಆಸ್ಪತ್ರೆಗಳಲ್ಲಿ ಗರ್ಭಪಾತವಾಗುತ್ತಿದ್ದರೆ ಯಾವ ಕಾರಣಕ್ಕೆ ಆಗುತ್ತಿವೆ ಎಂಬ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದೇವೆ ಎಂದರು.
ಆಸ್ಪತ್ರೆಗಳಲ್ಲಿ ಎಷ್ಟು ಮಂದಿ ಮಕ್ಕಳು ಹುಟ್ಟಿದ್ದಾರೆ, ಎಷ್ಟು ಮಂದಿ ಗರ್ಭಿಣಿ ಮಹಿಳೆಯರು ನೋಂದಣಿ ಆದ ನಂತರ ನಿರಂತರ ತಪಾಸಣೆಗೆ ಗೈರು ಹಾಜರಾಗಿದ್ದಾರೆ ಎಂದು ನಿರಂತರವಾಗಿ ಪರಿಶೀಲನೆ ಮಾಡಬೇಕು. ಅಲ್ಲದೆ, ಜಿಲ್ಲಾಮಟ್ಟದ ಅಧಿಕಾರಿಗಳು ಪ್ರತಿ ತಿಂಗಳು ಎಷ್ಟು ಸ್ಕ್ಯಾನಿಂಗ್ ಸೆಂಟರ್ಗಳಿಗೆ, ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ ಎಂಬುದರ ಬಗ್ಗೆ ಪರಿಶೀಲನಾ ಸಭೆ ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.
ಭ್ರೂಣಹತ್ಯೆ ಕುರಿತು ಪೊಲೀಸ್ ಇಲಾಖೆ ತನಿಖೆ: ಮಂಡ್ಯದಲ್ಲಿ ಬೆಳಕಿಗೆ ಬಂದಿರುವ ಭ್ರೂಣ ಹತ್ಯೆಗಳ ಪ್ರಕರಣ ಕುರಿತು ಪೊಲೀಸ್ ಇಲಾಖೆ ತನಿಖೆ ಮಾಡುತ್ತಿದೆ. ಅವರೊಂದಿಗೆ ನಮ್ಮ ಇಲಾಖೆಯೂ ಕೈಜೋಡಿಸಿ ಕೆಲಸ ಮಾಡಿದರೆ ಇಂತಹ ಪ್ರಕರಣಗಳು ನಡೆಯದಂತೆ ತಡೆಯಲು ಸಾಧ್ಯವಾಗುತ್ತದೆ ಎಂದರು.
ಮಂಡ್ಯದಲ್ಲಿ ಆಗಿರುವ ಘಟನೆಗೆ ಸಂಬಂಧಿಸಿ ನಮ್ಮ ಇಲಾಖೆಯ ಅಧಿಕಾರಿಗಳು ಈ ಹಿಂದೆ ಪರಿಶೀಲನೆಗೆ ಹೋಗಿದ್ದರು. ಆದರೆ, ಆ ವ್ಯಕ್ತಿ ಸಿಕ್ಕಿರಲಿಲ್ಲ. ಮಂಡ್ಯ ಜಿಲ್ಲಾ ವೈದ್ಯಾಧಿಕಾರಿಯಿಂದ ಈ ಬಗ್ಗೆ ಏನಾದರೂ ಕರ್ತವ್ಯಲೋಪ ಆಗಿದೆಯೇ ಎಂಬುದರ ಕುರಿತು ಹಿರಿಯ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ನ್ಯುಮೋನಿಯಾ ಹಾಗೂ ಇನ್‍ಫ್ಲೊಯೆಂಜಾ ಆತಂಕಪಡುವ ಅಗತ್ಯವಿಲ್ಲ: ಚೀನಾದಲ್ಲಿ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಹಾಗೂ ಇನ್‍ಫ್ಲೊಯೆಂಜಾ ವಿಚಾರದಲ್ಲಿ ಆತಂಕಪಡುವ ಅಗತ್ಯವಿಲ್ಲ. ಸರಕಾರ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದೆ. ನಮ್ಮ ರಾಜ್ಯದಲ್ಲಿ ಅಂತಹ ಯಾವುದೇ ಪ್ರಕರಣ ಕಂಡು ಬಂದಿಲ್ಲ. ಈಗಾಗಲೆ, ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರಕಾರ ಮಾರ್ಗಸೂಚಿಗಳನ್ನು ನೀಡಿದೆ ಎಂದರು.
Post a Comment