ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ; ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

 ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು...

                                                                       ಸಂಗ್ರಹ ಚಿತ್ರ

Posted By : Rekha.M
Source : Online Desk

ಬೆಂಗಳೂರು: ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು’ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಶುಕ್ರವಾರ ಮಹತ್ವದ ನಿರ್ಣಯ ಕೈಗೊಂಡಿದೆ.

ಇತ್ತೀಚೆಗೆ ತಮ್ಮ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಜಾರಿ ಮಾಡುವುದಾಗಿ ತಿಳಿಸಿದ್ದರು.

ಅಲ್ಲದೆ, ಸುಗ್ರೀವಾಜ್ಞೆ ಮೂಲಕ ಜಾರಿಯಾಗಲಿರುವ ತಿದ್ದುಪಡಿ ಕಾನೂನು ಅನ್ವಯ 2024ರ ಫೆಬ್ರುವರಿ 28ರ ಒಳಗಾಗಿ ರಾಜ್ಯದಲ್ಲಿನ ಎಲ್ಲಾ ‘ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರ, ಆಸ್ಪತ್ರೆ, ಪ್ರಯೋಗಾಲಯ, ಮನರಂಜನಾ ಕೇಂದ್ರ ಮತ್ತು ಹೋಟೆಲ್‌’ ಮುಂತಾದವುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು. ಉಳಿದ ಶೇ.40ರಷ್ಟು ಜಾಗದಲ್ಲಿ ಮಾತ್ರ ಇತರೆ ಭಾಷೆ ಇರಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಇದರಂತೆ ಶುಕ್ರವಾರ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಯಿದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲು ನಿರ್ಧರಿಸಲಾಗಿದೆ. ನಿರ್ಧಾರಕ್ಕೆ ರಾಜ್ಯಪಾಲರ ಅನುಮೋದನೆ ಬಿದ್ದ ತಕ್ಷಣದಿಂದ ತಿದ್ದುಪಡಿ ನಿಯಮ ಜಾರಿಯಾಗಲಿದೆ.

 ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್‌.ಕೆ.ಪಾಟೀಲ್ ಅವರು, ‘ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಪ್ರಾಧಾನ್ಯ ನೀಡಬೇಕಾಗಿರುವುದರಿಂದ ಮೇಲಿನ ಅರ್ಧ ಭಾಗ ಎಂಬುದರ ಬದಲಾಗಿ, ಶೇ 60ರಷ್ಟು ಭಾಗ ಕನ್ನಡ ಬಳಕೆ ಮಾಡಬೇಕು ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಭಾಗದಲ್ಲೇ ಇರಬೇಕು. ಕನ್ನಡ ಸಂಸ್ಕೃತಿ ನಿರ್ದೇಶಕರ ಬದಲಿಗೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದವರನ್ನು ಸಂಚಾಲಕರನ್ನಾಗಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯವರನ್ನು ಸದಸ್ಯರನ್ನಾಗಿ ಮಾಡಲಾಗುವುದು. ಈ ಅಂಶವು ತಿದ್ದುಪಡಿಯಲ್ಲಿ ಒಳಗೊಂಡಿದೆ’ ಎಂದು ವಿವರಿಸಿದರು.

ನಾಮಫಲಕಗಳಲ್ಲಿ ಕನ್ನಡ ಬಳಸದೇ ಇರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣಗೌಡರ ಬಣದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ದೇವನಹಳ್ಳಿ ಸಮೀಪದ ಸಾದಹಳ್ಳಿ ಗೇಟ್‌ನಿಂದ ಹೊರಟ ಮೆರವಣಿಗೆ ಭಾರಿ ಸಂಚಲನ ಮೂಡಿಸಿತ್ತು. ಕೆಲವು ಕಡೆಗಳಲ್ಲಿ ನಾಮಫಲಕಗಳನ್ನು ಒಡೆದು ಹಾಕಿದ್ದು, ಹೋರಾಟ ಹಿಂಸೆಗೆ ತಿರುಗಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು.

ನಾರಾಯಣಗೌಡ ಸೇರಿದಂತೆ 40ಕ್ಕೂ ಹೆಚ್ಚು ಜನರನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿತ್ತು. ಅವರಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ರಕ್ಷಣಾ ವೇದಿಕೆಯು, ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಶುಕ್ರವಾರದಿಂದ ಆರಂಭಿಸಿದೆ. ರಕ್ಷಣಾ ವೇದಿಕೆಯ ಕಾರ್ಯಕರ್ತರ ಹೋರಾಟವನ್ನು ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು ಬೆಂಬಲಿಸಿದ್ದವು.

2023ರ ಮಾರ್ಚ್‌ ತಿಂಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಸೆಕ್ಷನ್‌ 17 (6) ರಲ್ಲಿ ನಾಮಫಲಕಗಳಲ್ಲಿನ ಅರ್ಧ ಭಾಗವು (ಶೇ.50) ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿತ್ತು. ಇದೀಗ ನಿಯಮಕ್ಕೆ ತಿದ್ದುಪಡಿ ತಂದು ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಲಾಗಿದೆ.

ಇನ್ನು ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿನ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.


Post a Comment

أحدث أقدم