VISL ಕಾರ್ಖಾನೆ ಕುರಿತು ಕೇಂದ್ರ ಸಚಿವರಿಂದ ಪ್ರಮುಖ ಘೋಷಣೆ

 



ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಇಲ್ಲಿ ಸಮರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಆ ನಿಟ್ಟಿನಲ್ಲಿಯೇ ಭದ್ರಾವತಿ ಕಾರ್ಖಾನೆಗೆ ಮರುಜೀವ ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.

ಮೈಸೂರು ಮಹಾ ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಫಲವಾಗಿ ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಸ್ಥಾಪನೆ ಆಗಿತ್ತು. ಸಾವಿರಾರು ಜನರಿಗೆ ಅಲ್ಲಿ ಉದ್ಯೋಗ ಅವಕಾಶ ಸಿಕ್ಕಿತ್ತು. ಲಕ್ಷಾಂತರ ಜನರು ಪರೋಕ್ಷವಾಗಿ ಬದುಕು ಕಟ್ಟಿಕೊಂಡಿದ್ದರು. ಅಂತಹ ವೈಭವದ ದಿನಗಳು ಮರುಕಳಿಸುವ ದಿನಗಳು ದೂರವಿಲ್ಲ ಎಂದು ಕೇಂದ್ರ ಸಚಿವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಬೃಹತ್ ಕೈಗಾರಿಕೆ ಮತ್ತು ಉಕ್ಕಿನಂತಹ ಎರಡು ಮಹತ್ವದ ಖಾತೆಗಳನ್ನು ನೀಡಿದ್ದಾರೆ. ಎರಡೂ ಜವಾಬ್ದಾರಿಗಳನ್ನು ನಾನು ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿ ನಿರ್ವಹಣೆ ಮಾಡಲು ಪ್ರಯತ್ನ ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿಯವರು ಹೇಳಿದರು.


Post a Comment

أحدث أقدم